ಶಿಕಾರಿಗೆ ಹೆಣೆದ ಡೆತ್‌ಟ್ರ್ಯಾಪ್‌ಗೆ ಸಿಲುಕಿದ ಗಜರಾಜ: ಖದೀಮರ ಬೇಟೆಗೆ ಶಿವಮೊಗ್ಗದಲ್ಲಿ ಬಲಿಯಾಯ್ತಾ ಆನೆ?

ಶಿವಮೊಗ್ಗ: ಕಾಡುಪ್ರಾಣಿಗಳ ಬೇಟೆಗೆಂದು ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆಯೊಂದು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ತಾಲೂಕಿನ ಹಾಯ್ ಹೊಳೆ ಸಮೀಪದ ಈಚಲವಾಡಿ ಗ್ರಾಮದಲ್ಲಿ ನಡೆದಿದೆ.

ಶಂಕರ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಈ ಪ್ರದೇಶದಲ್ಲಿ, ಕಿಡಿಗೇಡಿಗಳು ಕಾಡುಪ್ರಾಣಿಗಳ ಶಿಕಾರಿಗಾಗಿ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ತಂತಿ ಬೇಲಿ ಅಳವಡಿಸಿದ್ದರು. ಆಹಾರ ಮತ್ತು ನೀರು ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬಂದಿದ್ದ ಗಜರಾಜ, ಆಕಸ್ಮಿಕವಾಗಿ ಈ ಅಕ್ರಮ ವಿದ್ಯುತ್ ಲೈನ್‌ ಮೇಲೆ ಕಾಲಿಟ್ಟಿದ್ದಾನೆ. ಪರಿಣಾಮವಾಗಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ, ಪರಿಶೀಲನೆ:

ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ತೀವ್ರ ಪರಿಶೀಲನೆ ನಡೆಸಿದ್ದಾರೆ. ಮೂಕಪ್ರಾಣಿಯ ಈ ಅಕಾಲಿಕ ಸಾವಿನಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಕಾನೂನು ಸಮರಕ್ಕೆ ಸಿದ್ಧತೆ:

ಕಾಡುಪ್ರಾಣಿಗಳನ್ನು ಬೇಟೆಯಾಡುವ ಉದ್ದೇಶದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅರಣ್ಯ ಇಲಾಖೆ ಮುಂದಾಗಿದೆ. ತಪ್ಪಿತಸ್ಥರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಓದುಗರ ಅಭಿಪ್ರಾಯಗಳು

Leave a Reply

Your email address will not be published. Required fields are marked *