ಕಾಡಿನಿಂದ ರಸ್ತೆಗೆ ಬಂದಿದ್ದೇ ತಪ್ಪಾಯ್ತಾ?: ತೀರ್ಥಹಳ್ಳಿಯಲ್ಲಿ ಮಧ್ಯರಾತ್ರಿ ನಡೆದ ದುರಂತವೇನು?

ತೀರ್ಥಹಳ್ಳಿ: ತಾಲೂಕಿನ ಮೇಳಿಗೆ ಸಮೀಪವಿರುವ ಕೌರಿಬೈಲು ಮಾರ್ಗದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿಯೊಂದು ದುರ್ಮರಣಕ್ಕೀಡಾಗಿದೆ.

ಕಾಡಿನಂಚಿನ ರಸ್ತೆಯನ್ನು ದಾಟುತ್ತಿದ್ದ ವೇಳೆ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ತೀವ್ರ ಪೆಟ್ಟು ಬಿದ್ದ ಪರಿಣಾಮ ಚಿರತೆ ಮರಿ ಸ್ಥಳದಲ್ಲೇ ಕೊನೆಯುಸಿರೆಳೆದಿದೆ. ಈ ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ಮೇಳಿಗೆ ಮತ್ತು ಕೌರಿಬೈಲು ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಚಿರತೆ ಸೇರಿದಂತೆ ಹಲವು ವನ್ಯಜೀವಿಗಳು ನೆಲೆಸಿವೆ. ಆಹಾರ ಮತ್ತು ನೀರು ಹುಡುಕಿಕೊಂಡು ರಾತ್ರಿ ಹಾಗೂ ಮುಂಜಾನೆ ವೇಳೆ ಪ್ರಾಣಿಗಳು ರಸ್ತೆಗಿಳಿಯುವುದು ಸಾಮಾನ್ಯವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ಎಚ್ಚರಿಕೆ ಫಲಕಕ್ಕೆ ಗ್ರಾಮಸ್ಥರ ಒತ್ತಾಯ:

ವನ್ಯಜೀವಿಗಳ ಸಂಚಾರ ಹೆಚ್ಚಿರುವ ಈ ರಸ್ತೆಗಳಲ್ಲಿ ವಾಹನಗಳ ವೇಗ ಮಿತಿಗೆ ಸೂಕ್ತ ನಿಯಂತ್ರಣ ತರಬೇಕು. ಸಂಭವನೀಯ ಅಪಘಾತಗಳನ್ನು ತಡೆಯಲು ಪ್ರಮುಖ ಸ್ಥಳಗಳಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಚಲಿಸುವಂತೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.

ಓದುಗರ ಅಭಿಪ್ರಾಯಗಳು

Leave a Reply

Your email address will not be published. Required fields are marked *