ಬದಲಾದ ಶಿವಮೊಗ್ಗ ಸಾರಥ್ಯ: ನೂತನ ಡಿಸಿಯಾಗಿ ಪ್ರಕಾಶ್ ನಿಟ್ಟಲಿ ಅಧಿಕಾರ ಸ್ವೀಕಾರ

ಶಿವಮೊಗ್ಗ: ನೂತನ ಜಿಲ್ಲಾಧಿಕಾರಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪ್ರಕಾಶ್ ಜಿ. ಟಿ. ನಿಟ್ಟಲಿ ಅಧಿಕಾರ ವಹಿಸಿಕೊಂಡಿದ್ದಾರೆ.

​ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ, ನಿರ್ಗಮಿತ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು. ರಾಜ್ಯ ಸರ್ಕಾರದ ಇತ್ತೀಚಿನ ಐಎಎಸ್ ಅಧಿಕಾರಿಗಳ ವರ್ಗಾವಣೆಯ ಭಾಗವಾಗಿ ಶಿವಮೊಗ್ಗ ಜಿಲ್ಲಾಡಳಿತದ ಚುಕ್ಕಾಣಿಯನ್ನು ನಿಟ್ಟಲಿ ಅವರಿಗೆ ವಹಿಸಲಾಗಿದೆ.

ಆಡಳಿತಾತ್ಮಕ ಅನುಭವ:

2018ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಪ್ರಕಾಶ್ ಜಿ. ಟಿ. ನಿಟ್ಟಲಿ ಅವರು ಈ ಹಿಂದೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಅಧ್ಯಕ್ಷರಾಗಿ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (CEO) ಹಾಗೂ ಸಕಾಲ ಮಿಷನ್‌ನ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ ದಕ್ಷ ಆಡಳಿತ ಅನುಭವ ಹೊಂದಿದ್ದಾರೆ.

ಪ್ರಭುಲಿಂಗ ಕವಳಿಕಟ್ಟಿಗೆ ಬೀಳ್ಕೊಡುಗೆ:

ಕಳೆದ ಜನವರಿಯಿಂದ ಶಿವಮೊಗ್ಗದಲ್ಲಿ ಜನಸ್ನೇಹಿ ಆಡಳಿತ ನೀಡಿದ್ದ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಅವರಿಗೆ ಗೌರವಪೂರ್ವಕ ಬೀಳ್ಕೊಡುಗೆ ನೀಡಿದರು.

ಜನಪರ ಆಡಳಿತಕ್ಕೆ ಮೊದಲ ಆದ್ಯತೆ:

ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಜಿಲ್ಲಾಧಿಕಾರಿ ಪ್ರಕಾಶ್ ನಿಟ್ಟಲಿ, “ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸುವುದು ನನ್ನ ಮೊದಲ ಆದ್ಯತೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪುವಂತೆ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲಾಗುವುದು” ಎಂದರು. ಈ ವೇಳೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸನ್ಮಾನ:

ನೂತನವಾಗಿ ಅಧಿಕಾರ ವಹಿಸಿಕೊಂಡ ಜಿಲ್ಲಾಧಿಕಾರಿಗಳಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದಿಸಲಾಯಿತು. ಸಂಘದ ಪದಾಧಿಕಾರಿಗಳನ್ನೊಳಗೊಂಡ ನಿಯೋಗವು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವರನ್ನು ಭೇಟಿ ಮಾಡಿ, ಪುಷ್ಪಗುಚ್ಛ ನೀಡಿ ಗೌರವಿಸಿತು.

ಈ ಸಂದರ್ಭದಲ್ಲಿ ನಿಯೋಗವು ನೂತನ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲೆಯ ಆರ್ಥಿಕ ಸ್ಥಿತಿಗತಿ, ವ್ಯಾಪಾರ-ವಹಿವಾಟು ಹಾಗೂ ಕೈಗಾರಿಕಾ ಕ್ಷೇತ್ರದ ಪ್ರಗತಿಯ ಕುರಿತು ಮಹತ್ವದ ಸಮಾಲೋಚನೆ ನಡೆಸಿತು. ಸ್ಥಳೀಯ ಕೈಗಾರಿಕೆಗಳು ಎದುರಿಸುತ್ತಿರುವ ಮೂಲಸೌಕರ್ಯಗಳ ಕೊರತೆ, ಹೊಸ ಹೂಡಿಕೆಗಳಿಗೆ ಪೂರಕ ವಾತಾವರಣ ನಿರ್ಮಾಣ ಹಾಗೂ ಉದ್ಯೋಗಾವಕಾಶಗಳ ಸೃಷ್ಟಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು. ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ಬೆಳವಣಿಗೆಗೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ಮತ್ತು ಬೆಂಬಲ ನೀಡುವುದಾಗಿ ಜಿಲ್ಲಾಧಿಕಾರಿಗಳು ನಿಯೋಗಕ್ಕೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ. ಗೋಪಿನಾಥ್, ಉಪಾಧ್ಯಕ್ಷ ಜಿ. ವಿಜಯ್ ಕುಮಾರ್, ಕಾರ್ಯದರ್ಶಿ ಎ. ಎಂ. ಸುರೇಶ್ ಹಾಗೂ ಖಜಾಂಚಿ ಆರ್. ಮನೋಹರ್ ಸೇರಿದಂತೆ ಸಂಘದ ಪ್ರಮುಖರು ಉಪಸ್ಥಿತರಿದ್ದರು.

ಓದುಗರ ಅಭಿಪ್ರಾಯಗಳು

Leave a Reply

Your email address will not be published. Required fields are marked *